ಬೇಲೂರು:-ಮನೆಯವರು ಹೊರಗೆ ತೆರಳಿದ್ದ ಸಂದರ್ಭದಲ್ಲಿ ಮನೆಯ ಹಿಂಭಾಗದ ಕಂಬಿ ಮುರಿದು ಒಳನುಗ್ಗಿದ ಕಳ್ಳರು ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿರುವ ಘಟನೆ ಬೇಲೂರು ಪಟ್ಟಣದಲ್ಲಿ ನಡೆದಿದೆ.
ಪಟ್ಟಣದ ನಿವಾಸಿ ಮುದಾರ್ ಸಾಬ್ ಜಮಾಲ್ ಸಾಬ್ (65) ಅವರು ಈ ಕುರಿತು ಬೇಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಸೆ.24ರಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಪತ್ನಿಯೊಂದಿಗೆ ಹೊರಗೆ ತೆರಳಿದ್ದ ಅವರು, ಸಂಜೆ 7.30ರ ಸುಮಾರಿಗೆ ಮನೆಗೆ ವಾಪಸ್ ಬಂದಾಗ ಮನೆಯ ಹಿಂಭಾಗದ ಕಂಬಿ ಮುರಿದಿರುವುದು ಕಂಡುಬಂದಿದೆ. ಒಳಗೆ ಪರಿಶೀಲಿಸಿದಾಗ ಕಪಾಟು ಮುರಿದು ಚಿನ್ನಾಭರಣ ಸೇರಿದಂತೆ ಬೆಲೆಬಾಳುವ ವಸ್ತುಗಳನ್ನು ಕಳವು ಮಾಡಿರುವುದು ಗೊತ್ತಾಗಿದೆ..
ಕಳ್ಳರು ಸುಮಾರು 20 ಗ್ರಾಂ ತೂಕದ ಚಿನ್ನಾಭರಣ, ಉಂಗುರ, ಕಿವಿಯೋಲೆ, ನೆಕ್ಲೆಸ್ ಹಾಗೂ ಕೆಲವು ದಾಖಲೆಗಳನ್ನು ಕಳವು ಮಾಡಿಕೊಂಡು ಪರಾರಿಯಾಗಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಸಿಪಿಐ ರೇವಣ್ಣ ಅವರ ನೇತೃತ್ವದಲ್ಲಿ ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದು, ಕಳ್ಳರ ಪತ್ತೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
