Ticker

6/recent/ticker-posts

ಪೌಷ್ಟಿಕ ಆಹಾರ ಸೇವನೆಗೆ ವೈಜ್ಞಾನಿಕ ಪದ್ಧತಿ ಅಗತ್ಯ

ಪಾವಗಡ: ದೈನಂದಿನ ಜೀವನದಲ್ಲಿ ಪೌಷ್ಟಿಕ ಆಹಾರವನ್ನು ಅಳವಡಿಸಿಕೊಳ್ಳುವುದರ ಜೊತೆಗೆ ವೈಜ್ಞಾನಿಕ ಆಹಾರ ಪದ್ಧತಿಗಳನ್ನು ರೂಢಿಸಿಕೊಳ್ಳುವುದು ಅಗತ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಡಾ.ಎಸ್. ಸಿದ್ದರಾಮಣ್ಣ ಹೇಳಿದರು.

ತಾಲ್ಲೂಕಿನ ತಿರುಮಣಿ ವೃತ್ತದಲ್ಲಿ ಶಿಶು ಅಭಿವೃದ್ಧಿ ಯೋಜನೆ ವತಿಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪೋಷಣ್ ಮಾಸಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಮಕ್ಕಳು, ಗರ್ಭಿಣಿಯರು ಹಾಗೂ ಬಾಣಂತಿಯರ ಆರೋಗ್ಯಕ್ಕೆ ಪೌಷ್ಟಿಕ ಆಹಾರ ಪ್ರಮುಖ ಪಾತ್ರ ವಹಿಸುತ್ತದೆ. ದೈನಂದಿನ ಆಹಾರದಲ್ಲಿ ಅಗತ್ಯ ಪೋಷಕಾಂಶಗಳನ್ನು ಒಳಗೊಂಡ ಆಹಾರ ಪದಾರ್ಥಗಳನ್ನು ಸಮತೋಲನದಿಂದ ಸೇವಿಸುವ ಮೂಲಕ ಆರೋಗ್ಯಕರ ಜೀವನ ನಡೆಸಬಹುದು. ಈ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು ಪೋಷಣ್ ಮಾಸಾಚರಣೆಯ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಜಿಲ್ಲಾ ನಿರೂಪಣಾಧಿಕಾರಿ ಅನುಷಾ ಮಾತನಾಡಿ, ಸ್ಥಳೀಯವಾಗಿ ದೊರೆಯುವ ಸಾಂಪ್ರದಾಯಿಕ ಹಾಗೂ ಪೌಷ್ಟಿಕ ಆಹಾರಕ್ಕೆ ಆದ್ಯತೆ ನೀಡಬೇಕು. ಗರ್ಭಿಣಿಯರು ಆಹಾರ ಸೇವನೆಗೆ ಸಂಬಂಧಿಸಿದ ಮೂಢನಂಬಿಕೆಗಳನ್ನು ತೊರೆದು, ಪೌಷ್ಟಿಕ ಆಹಾರ ಸೇವಿಸುವ ಮೂಲಕ ತಮ್ಮ ಹಾಗೂ ಮಗುವಿನ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು. 

ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸುನಿತಾ ಡಿ.ಜಿ. ಇಲಾಖೆಯ ವಿವಿಧ ಯೋಜನೆಗಳ ಕುರಿತು ಮಾಹಿತಿ ನೀಡಿದರು. ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೈಯದ್ ರಕೀಬ್ ಉಲ್ಲಾಮಾತನಾಡಿ, ಸಮುದಾಯದ ಸಹಕಾರದೊಂದಿಗೆ ಪ್ರತಿಯೊಂದು ಅಂಗನವಾಡಿ ಕೇಂದ್ರವನ್ನು ಮಾದರಿ ಕೇಂದ್ರವನ್ನಾಗಿ ರೂಪಿಸಲು ಕಾರ್ಯಕರ್ತೆಯರು ಶ್ರಮಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ  ಹಾಗೂ ಮಕ್ಕಳಿಗೆ ಅನ್ನಪ್ರಾಸನ ನೆರವೇರಿಸಲಾಯಿತು. ಇಲಾಖೆಯಲ್ಲಿ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತರಾದ ಅಂಗನವಾಡಿ ಕಾರ್ಯಕರ್ತೆಯೊಬ್ಬರನ್ನು ಸನ್ಮಾನಿಸಲಾಯಿತು. ಫಲಾನುಭವಿ ಮಕ್ಕಳಿಗೆ ಭಾಗ್ಯಲಕ್ಷ್ಮಿ ಮತ್ತು ಸುಕನ್ಯಾ ಸಮೃದ್ಧಿಯೋಜನೆಗಳ ಪಾಸ್ ಪುಸ್ತಕಗಳನ್ನು ವಿತರಿಸಲಾಯಿತು.

ಮೇಲ್ವಿಚಾರಕಿಯರಾದ ಜಯಲಕ್ಷ್ಮಿ, ಮಮತಾ.ಎ. ಭಾಗ್ಯಲಕ್ಷ್ಮಿ, ವಿಜಯಲಕ್ಷ್ಮಿ,  ಮುಖ್ಯ ಶಿಕ್ಷಕ ರಾಮಂಜಿ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆಶಾ ಕಾರ್ಯಕರ್ತೆಯರು,ಪೋಷಕರು ಹಾಗೂ ಮಕ್ಕಳು ಉಪಸ್ಥಿತರಿದ್ದರು.